Feb 1, 2011

ಮೊನ್ನೆ, ವರ್ಧಂತ್ಯುತ್ಸವ

“ಶಾಲಾ ಮಟ್ಟದಲ್ಲಿ ನೈತಿಕ ಶಿಕ್ಷಣವನ್ನು ನೀಡುವುದು ಇಂದಿನ ಜನಾಂಗಕ್ಕೆ ಅತೀ ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಬೆಳಗಿಸಿ ಅವರ ನೈತಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ವಾರ್ಷಿಕೋತ್ಸವಗಳು ಗಣನೀಯ ಸೇವೆ ಸಲ್ಲಿಸುತ್ತವೆ. ಇಂತಹ ವರ್ಧಂತ್ಯುತ್ಸವದ ಸಂಭ್ರಮದಲ್ಲಿರುವ ಈ ವಿದ್ಯಾಸಂಸ್ಥೆಗಳು ಕೆಲವೇ ವರ್ಷಗಳಲ್ಲಿ ಬೆಳೆದು ನಾಡಿನಾದ್ಯಂತ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ವಿಚಾರ” ಎಂದು ಕ್ಯಾಂಪ್ಕೊ ಸಂಸ್ಥೆಯ ಉಪಾಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ ಅಭಿಪ್ರಾಯಪಟ್ಟರು. ಅವರು ದಿನಾಂಕ ೨೮.೦೧.೨೦೧೧ ಶುಕ್ರವಾರ ನಡೆದ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠ ಮತ್ತು ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯಗಳ ವರ್ಧಂತ್ಯುತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಮುಜುಂಗಾವು ಶ್ರೀಭಾರತೀ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಡಾ|ಡಿ.ಪಿ.ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ತಿಲು, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕರುಣಾಕರ ಅನಂತಪುರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶ್ರೀಭಾರತೀ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎ.ಕೃಷ್ಣ ಭಟ್ ಶುಭ ಹಾರೈಸಿದರು. ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಭಾರತೀ ವಿದ್ಯಾಪೀಠದ ವರದಿಯನ್ನು ಮುಖ್ಯೋಪಾಧ್ಯಾಯ ಶ್ಯಾಮ ಭಟ್, ದರ್ಭೆ-ಮಾರ್ಗ ಹಾಗೂ ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ವರದಿಯನ್ನು ಪ್ರಾಂಶುಪಾಲ ಕೃಷ್ಣಮೂರ್ತಿ ಪುದುಕೋಳಿ ವಾಚಿಸಿದರು.

ಈ ಸಂದರ್ಭದಲ್ಲಿ ಶ್ರೀಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳ ‘ಬೆಳಕು’ ಮತ್ತು ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗಳ ‘ಬೆಳಗು’ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಸುಪ್ರೀತಾ. ಎಂ ಸ್ವಾಗತಿಸಿ, ಶ್ರೀಹರಿಶಂಕರ ಶರ್ಮ ವಂದಿಸಿದರು. ಈಶ್ವರಚಂದ್ರ ಜೋಯಿಸ ಕಾರ್ಯಕ್ರಮ ನಿರೂಪಿಸಿದರು.








ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನೃತ್ಯ ವೈವಿಧ್ಯಗಳ ಜೊತೆಗೆ ಶ್ರೀಭಾರತೀ ವಿದ್ಯಾಪೀಠ ದ ವಿದ್ಯಾರ್ಥಿಗಳಿಂದ ‘ವೀರಮಣಿ’ ಮತ್ತು ಶ್ರೀಭಾರತೀ ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ‘ನರಕಾಸುರ ವಧೆ’ ಯಕ್ಷಗಾನ ಬಯಲಾಟ ಜರಗಿತು.

1 comment: